ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ ಪಲ್ಲವಿ
ಸಂಸಾರ ಸಾಗರದಾಗ ಲೆಕ್ಕವಿಲ್ಲದಷ್ಟು ದುಃಖದ ಬಂಡಿ
ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ ಎಲ್ಲಿ ಆಚೆಯಾ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ
ನಾ ತಡೀಲಾರೆ ಅದು, ಯಾಕ ನೋಡತೀ ಮತ್ತ ಮತ್ತ ಇತ್ತ?
ತಂಬಲs ಹಾಕದ ತುಂಬ ಕೆಂಪು ಗಿಡಗಡಕನಕಣ್ಣಿನ ಹಾಂಗ
ಇದ್ದಂಥ ತುಟಿಯ ಬಣ್ಣೆತ್ತ ಹಾರಿತು? ಯಾವ ಗಾಳಿಗೆ, ಹೀಂಗ
ಈ ಗದ್ದ, ಗಲ್ಲ, ಹಣಿ, ಕಣ್ಣುಕಂಡು ಮಾರೀಗೆ ಮಾರಿಯ ರೀತಿ
ಸಾವನs ತನ್ನ ಕೈ ಸವರಿತಲ್ಲಿ, ಬಂತೆನಗ ಇಲ್ಲದ ಭೀತಿ,
ಧಾರೀಲೆ ನೆನೆದ ಕೈ ಹಿಡಿದೆ ನೀನು, ತಣ್ಣsಗ ಅಂತ ತಿಳಿದು
ಬಿಡವೊಲ್ಲಿ ಇನ್ನುನೂ, ಬೂದಿಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲsನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನs
ಆ ಗಾದಿ ಮಾತು ನಂಬಿ, ನಾನು ದೇವರಂತ ತಿಳಿದಿಯೇನ ನೀ ನನ್ನ.
ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಂಟಿಯಾ ಹಣ್ಣು
ಹೊಳೆ ಹೊಳೆವ ಹಾಂಗಿರುವ ಕಣ್ಣಿರುವ, ಹೆಣ್ಣ, ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲs
ಹುಣ್ಣವೀ ಚಂದಿರನ ಹೆಣ ಬಂತೊ ಮುಗಿಲಾಗ ತೇಲತ ಹಗಲ!
ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು, ನಡ ನಡಕ ಹುಚ್ಚನಗಿ ಯಾಕ?
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ
ಅತ್ತಾರ ಅತ್ತುಬಿಡು, ಹೊನಲು ಬರಲಿ, ನಕ್ಯಾಕ ಮರಸತೀ ದುಕ್ಕ?
ಎವೆಬಡಿಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿಕಚ್ಚಿ ಹಿಡಿಯದಿರು ಬಿಕ್ಕ
-ದ.ರಾ. ಬೇಂದ್ರೆ (ಅಂಬಿಕಾತನಯದತ್ತ)-ನಾದಲೀಲೆ